ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17 : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಯೋಜನೆ ಅನುಷ್ಠಾನಗಾಗಿ ಸಂತ್ರಸ್ತರಾಗುವ ರೈತರಿಗೆ ಸರ್ಕಾರ ನ್ಯಾಯಸಮ್ಮತ ಪರಿಹಾರ ಘೋಷಿಸಿದೆ. ಇದಕ್ಕಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಅಭಿನಂದಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಮಾಜಿ ಸಚಿವರಾದ ಎಸ್.ಆರ್.ಪಾಟೀಲ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಶೇಷ ಸಂಪುಟ ಸಭೆ ಕರೆದು ಸುದೀರ್ಘ ಚರ್ಚೆ ನಡೆಸಿದೆ. ಸದರಿ ವಿಶೇಷ ಸಂಪುಟ ಸಭೆಯಲ್ಲಿ ಯೋಜನೆ ಅನುಷ್ಠಾನದಿಂದ ಹಿನ್ನೀರಿನಲ್ಲಿ ಮುಳುಗಡೆಯಿಂದ ಭೂಮಿ ಕಳೆದುಕೊಂಡು ಸಂತ್ರಸ್ತರಾಗುವ ರೈತರಿಗೆ ಪ್ರತಿ ಎಕರೆ ನೀರಾವರಿ ಜಮೀನಿಗೆ 40 ಲಕ್ಷ ರೂ. ಹಾಗೂ ಮಳೆ ಆಶ್ರಿತ ಜಮೀನಿಗೆ 30 ಲಕ್ಷ ರೂ. ಹಾಗೂ ಸಂತ್ರಸ್ತರ ಪುನರ್ವಸತಿಗೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ 30 ಲಕ್ಷ ರೂ. ಹಾಗೂ ಒಣ ಬೇಸಾಯದ ಜಮೀನಿಗೆ 25 ಲಕ್ಷ ರೂ. ಪರಿಹಾರ ಘೋಷಿಸುವ ಮೂಲಕ ಸರ್ಕಾರ ನ್ಯಾಯ ಸಮ್ಮತ ಪರಿಹಾರ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ವಿಶೇಷ ಸಂಪುಟ ಸಭೆಯಲ್ಲಿ ಹಾಜರಿದ್ದು ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರಿ ಸಾಗರದ ಆಣೆಕಟ್ಟೆಗೆ ಗೇಟ್ ಎತ್ತರಿಸಬೇಕಿದೆ. ಜಲಾಶಯಕ್ಕೆ 524 ಮೀಟರಗೆ ಗೇಟ್ ಎತ್ತರಿಸುವುದರಿಂದ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆ ಹಾಗೂ ಸಂತ್ರಸ್ತರ ಪುರ್ವಸತಿಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಪ್ರಸಕ್ತ ಸಂದರ್ಭದ ಮಾರುಕಟ್ಟೆ ದರಕ್ಕೆ ತಕ್ಕಂತೆ ಪರಿಹಾರ ಸಹಿತ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಸಂತ್ರಸ್ತರ ಬೇಡಿಕೆ ಈಡೇರಿಸಲು ಸರ್ಕಾರ ತ್ವರಿತವಾಗಿ ಕಾರ್ಯೋನ್ಮುಖವಾಗಬೇಕು ಎಂಬ ಯೋಜಿತ ಪ್ರದೇಶದ ಸಂಭವನೀಯ ಸಂತ್ರಸ್ತರ ದಶಕದ ಮನವಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಅವರಿಗೆ ಸಚಿವರಾದ ಶಿವಾನಂದ ಪಾಟೀಲ ಅವರು ವಿವರಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚುನಾವಣೆ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀಡಿದ್ದ ಭರವಸೆ ಈಡೇರುವ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನದ ವಿಷಯದಿಂದ ಕಾಂಗ್ರೆಸ್ ಸರ್ಕಾರ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ತೋರಿದೆ. ಹೀಗಾಗಿ ಸರ್ಕಾರಕ್ಕೆ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರು ಅಭಿನಂದನಾರ್ಹರು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಸಚಿವ ಶಿವಾನಂದ ಪಾಟೀಲರನ್ನು ಅಭಿನಂದಿಸಿದ ಮಾಜಿ ಸಚಿವ ಎಸ್.ಅರ್. ಪಾಟೀಲ
