ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ತಂಡ ನಾಳೆ ವಿಜಯಪುರ ಜಿಲ್ಲೆ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:
ಕರ್ನಾಟಕ ಪ್ರದೇಶ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಅಧ್ಯಯನ ತಂಡವು ಜುಲೈ 14ರಂದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಲಿದೆ.
ಈ ಪ್ರವಾಸವು ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನದ ಭಾಗವಾಗಿದೆ.
ತಂಡದಲ್ಲಿ ಜನತಾದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ ಇಂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬರ ಪರಿಸ್ಥಿತಿಯ ಸಮೀಕ್ಷೆ ನಡೆಸಿದ ಬಳಿಕ ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ನಂತರ ದೇವರ ಹಿಪ್ಪರಗಿ ಮಾರ್ಗವಾಗಿ ಬಸವನ ಬಾಗೇವಾಡಿ ಕ್ಷೇತ್ರದ ಉಕ್ಕಲಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ, ಮನಗೂಳಿ ಗ್ರಾಮದಲ್ಲಿ ಅಪ್ಪುಗೌಡರ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ತಂಡವು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕಡೆಗೆ ಪ್ರಯಾಣ ಬೆಳೆಸಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮನವಿ ಮಾಡಿದ್ದಾರೆ.

Share this