ಗೊಂದಲಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಅ.2 :
ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಭೂ ಮಾಪಕರ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಯಿತು.
ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆ ಹಾಗೂ ಕೇಂದ್ರಗಳಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಕ್ಯಾಬ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಪಿಡಿಜೆ ಕಾಲೇಜು ಸೇರಿದಂತೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಪರೀಕ್ಷಾ ಕೊಠಡಿಗಳ ವ್ಯವಸ್ಥೆ, ಅಭ್ಯರ್ಥಿಗಳಿಗೆ ಕಲ್ಪಿಸಿರುವ ಮೂಲಸೌಕರ್ಯ ಹಾಗೂ ಭದ್ರತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಬೇಕು. ಯಾವುದೇ ಗೊಂದಲ, ಲೋಪ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿ, ಅಭ್ಯರ್ಥಿಗಳಿಗೆ ಯಾವುದೇ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ವಿಜಯಪುರ ನಗರದ 18 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6,956 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ನಿರಂತರ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.


