ಸಪ್ತಸಾಗರ ವಾರ್ತೆ,ಬೆಂಗಳೂರು, ಆ.14 : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸಲು ಹೊಸ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಆಯೋಗದ ಸಭೆಯಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಮುಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಚರ್ಚೆ ನಡೆಯಿತು.
ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು 3ರಿಂದ 5 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿಯನ್ನು ಹೆಚ್. ಪ್ರಸನ್ನ ಅವರು ವಿವರಿಸಿದರು.
ಇನ್ನು ಮುಂದೆ ನೇಮಕಾತಿ ಪರೀಕ್ಷೆ ಮುಗಿದ ಕೂಡಲೇ ಆಯಾ ಜಿಲ್ಲೆಗಳಲ್ಲಿ ಲಭ್ಯವಿರುವ ಸ್ಕ್ಯಾನಿಂಗ್ ಯಂತ್ರಗಳ ಮೂಲಕ OMR ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ, ಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಅಭ್ಯರ್ಥಿಗಳು ತಮ್ಮ OMR ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಅವಕಾಶ ದೊರೆಯಲಿದೆ.
ಅಲ್ಲದೆ, ಪರೀಕ್ಷೆ ಪೂರ್ಣಗೊಂಡ ಒಂದು ವಾರದೊಳಗೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.
ಸಭೆಯಲ್ಲಿ ಆಯೋಗದ ಸದಸ್ಯರು ವಿವಿಧ ಸಲಹೆಗಳನ್ನು ನೀಡಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ಹಾಗೂ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ಸರ್ಕಾರಿ ಉದ್ಯೋಗದ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಯಾವುದೇ ವ್ಯಕ್ತಿಗಳ ಆಮಿಷಗಳಿಗೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ ಆಯೋಗದ ಅಧಿಕೃತ ಮಾಹಿತಿಯನ್ನು ಮಾತ್ರ ಅವಲಂಬಿಸುವಂತೆ ಕೆಪಿಎಸ್‌ಸಿ ಮನವಿ ಮಾಡಿದೆ. ಮಧ್ಯವರ್ತಿಗಳು ಅಥವಾ ಅನಧಿಕೃತ ವ್ಯಕ್ತಿಗಳ ಭರವಸೆಗಳಿಗೆ ಬಲಿಯಾಗದೆ, ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ ಸರ್ಕಾರಿ ಉದ್ಯೋಗದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದೆ.
ಯುಪಿಎಸ್‌ಸಿ ಮಾದರಿಯ ಪಾರದರ್ಶಕತೆ, ತಂತ್ರಜ್ಞಾನ ಬಳಕೆ ಹಾಗೂ ತ್ವರಿತ ನೇಮಕಾತಿ ವ್ಯವಸ್ಥೆಯನ್ನು ಅಳವಡಿಸಿಕೊಂಡು ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


