ಕೃಷ್ಣಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ : ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.6: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗುವುದರಿಂದ ಕಾಮಗಾರಿ ಅನುಷ್ಠಾನದಲ್ಲಿ ವಿಳಂಬವಾಗುತ್ತದೆ. ಈ ಹಿನ್ನಲೆಯಲ್ಲಿ ರೈತರು ಪರಿಹಾರ ಕೊಡಿ ಎಂದು ನ್ಯಾಯಾಲಯದ ಮೊರೆ ಹೋಗದಂತೆ ಅವರು ಮನವಿ ಮಾಡಿಕೊಂಡರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ದಿಂದ 524.25 ಮೀಟರ್‍ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ. ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಅಣೆಕಟ್ಟು ಎತ್ತರ ಹೆಚ್ಚಳ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ. ನಾವು ಕೇಂದ್ರದ ಮೇಲೆ ಹಾಕುತ್ತಿರುವ ಒತ್ತಡ ನೋಡಿದರೆ ಯಾವ ಕ್ಷಣದಲ್ಲಿ ಬೇಕಾದರೂ ಅಧಿಸೂಚನೆ ಹೊರಡಿಸಬಹುದು. ನಮ್ಮ ಪಾಲು ನಮಗೆ ಸಿಗಲೇಬೇಕು. ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ನಾವು ಎಲ್ಲಾ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು.
ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು. ಮುಖ್ಯಮಂತ್ರಿಯವರು ಹಾಗೂ ಯೋಜನೆ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ ನಡೆಸಿ ಬೆಲೆ ನಿಗದಿ ತೀರ್ಮಾನ ಮಾಡಲಾಗುವುದು. ಯಾವುದೇ ಮೇಲ್ಮನವಿ ಇಲ್ಲದಂತೆ ಒಂದೇ ಹಂತದ ಒಪ್ಪಿತ ಭೂಸ್ವಾಧೀನಕ್ಕೆ ಮುಖಂಡರು, ಜನಪ್ರತಿನಿಧಿಗಳು ಒಪ್ಪಿಗೆ ನೀಡಬೇಕು. ಪುನರ್ವಸತಿ ಬಗ್ಗೆ ಪ್ರತ್ಯೇಕ ತೀರ್ಮಾನ ಮಾಡಲಾಗುವುದು. ಸಮುದ್ರಕ್ಕೆ ಹೋಗುತ್ತಿರುವ ನೀರನ್ನು ನಮ್ಮ ಜನರಿಗೆ ನೀರಾವರಿ ಕಲ್ಪಿಸುವುದು ನಮ್ಮ ಸಂಕಲ್ಪ. ಇದನ್ನು ಇದೇ ಅವಧಿಯಲ್ಲಿ ಮಾಡಲು ಮುಂದಾಗಿದ್ದೇವೆ ಎಂದರು.
ಮುಳುಗಡೆ ಜಮೀನುಗಳಿಗೆ ಉದಾರ ಮನಸ್ಸಿನಿಂದ ಪರಿಹಾರ ನೀಡಬೇಕು. ಕಾಲುವೆಗಳು ಹಾದು ಹೋಗುವ ಕಡೆ ರೈತರಿಗೆ ಅನುಕೂಲವಾಗುವುದರಿಂದ ಇಂತಿಷ್ಟು ಪರಿಹಾರ ಬೇಕು ಎನ್ನುವ ಬೇಡಿಕೆಯಿಲ್ಲ ಎಂದು ಶಾಸಕ ಯಶವಂತರಾಯ ಗೌಡ ಪಾಟೀಲರು ಅಭಿಪ್ರಾಯ ತಿಳಿಸಿದ್ದಾರೆ. ಶಿವಾನಂದ ಪಾಟೀಲರು, ಎಂ.ಬಿ.ಪಾಟೀಲರು ಸಹ ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜವಳಿ,ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪುರ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ರಾಜೂಗೌಡ ಪಾಟೀಲ, ಅಶೋಕ ಮನಗೂಳಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ವಿಜಯಪುರ-ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share