ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:
ಜಿಲ್ಲೆಯಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಬಿತ್ತನೆ ಬೀಜ, ರಸಗೊಬ್ಬರ ಮತ್ತು ಮೇವು ಲಭ್ಯತೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಜುಲೈ ಎರಡನೇ ವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆಯಾದರೂ, ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸ ಬೋರ್‌ವೆಲ್‌ಗಳನ್ನು ಕೊರೆದು ವಿದ್ಯುತ್ ಸಂಪರ್ಕ ಕಲ್ಪಿಸಲು ಸಮಯ ಬೇಕಾಗುವುದರಿಂದ, ಖಾಸಗಿ ಬೋರ್‌ವೆಲ್‌ಗಳನ್ನು ಈಗಿನಿಂದಲೇ ಗುರುತಿಸಿಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ತಾಜ್ ಬಾವಡಿಯ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಸೂಚನೆ ನೀಡಲಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಗತ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ವಿದ್ಯುತ್ ಕೊರತೆ ಇಲ್ಲ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ದಾಸ್ತಾನು ಲಭ್ಯವಿದೆ. ಜಿಲ್ಲೆಯ ಜೋಳಕ್ಕೆ ಜಿಐ (ಭೌಗೋಳಿಕ ಸೂಚ್ಯಂಕ) ಟ್ಯಾಗ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದೇ ರೀತಿ ಒಣ ದ್ರಾಕ್ಷಿ ಹಾಗೂ ದ್ರಾಕ್ಷಿಗೂ ಜಿಐ ಟ್ಯಾಗ್ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಿಜಯಪುರ ನಗರಕ್ಕೆ ಕೃಷ್ಣಾ ನದಿಯಿಂದ ಮತ್ತೊಂದು ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲು ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರತಿ ವಾರ ಸಭೆ ನಡೆಸಲಿದ್ದು, ತಾವು ಪ್ರತಿ ಹದಿನೈದು ದಿನಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸುವುದಾಗಿ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.
ಮಳೆ ಅಭಾವ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ಸಚಿವ ಡಾ. ಎಂ.ಬಿ. ಪಾಟೀಲ


