₹1.1 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಓರ್ವ ಬಂಧನ
ಸಪ್ತಸಾಗರ ವಾರ್ತೆ, ವಿಜಯಪುರ, ಅ.18:
ಮಾದಕ ದ್ರವ್ಯಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ವಿಜಯಪುರ ಜಿಲ್ಲಾ ಪೊಲೀಸರು ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ 200 ಕೆಜಿಗೂ ಅಧಿಕ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಸುಮಾರು ₹1.1 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನನ್ನು ಶಿವಶಂಕರ ಶರಣಪ್ಪ ಜೀರ್ ಎಂದು ಗುರುತಿಸಲಾಗಿದೆ. ಆರೋಪಿ ತನ್ನ ಹೊಲದಲ್ಲಿ ತೊಗರಿ ಬೆಳೆ ಮಧ್ಯೆ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಬೆಳೆದಿದ್ದ ಎನ್ನಲಾಗಿದೆ.
ದಿಂಡವಾರ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿರುವ ಕುರಿತು ಬೀಟ್ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಎನ್ಡಿಪಿಎಸ್ ಕಾಯ್ದೆಯ ನಿಯಮಾನುಸಾರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ತನಿಖೆ ಹಾಗೂ ಕಾರ್ಯಾಚರಣೆಯಲ್ಲಿ ಬಸವನಬಾಗೇವಾಡಿ ಡಿವೈಎಸ್ಪಿ ಚಂದ್ರಕಾಂತ ನಂದರೆಡ್ಡಿ ಹಾಗೂ ಗುರುಶಾಂತ ದಾಶ್ಯಾಳ ಅವರ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.
ಮಾದಕ ದ್ರವ್ಯಗಳ ಜಾಲ ಮಟ್ಟಹಾಕಲು ಕ್ರಮ
ಮಾದಕ ದ್ರವ್ಯಗಳ ಮಾರಾಟ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಂಭೀರ ಕ್ರಮ ಕೈಗೊಳ್ಳುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೀಟ್ ಮಟ್ಟದಲ್ಲಿಯೂ ಮಾದಕ ದ್ರವ್ಯಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯ ಕುರಿತು ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಯಾರಿಕೆ, ಮಾರಾಟ ಅಥವಾ ಬಳಕೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದರೆ ಪೊಲೀಸರಿಗೆ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸೂಕ್ತ ಮಾಹಿತಿಗೆ ಇಲಾಖೆಯಿಂದ ಬಹುಮಾನವೂ ನೀಡಲಾಗುವುದು ಎಂದು ಅವರು ತಿಳಿಸಿದರು.


