ಸಪ್ತಸಾಗರ ವಾರ್ತೆ ವಿಜಯಪುರ, ಜೂ. 14:
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಲಿರುವ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿ, ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಹಾಗೂ ವಿದ್ಯಾರ್ಥಿ ನಾಯಕ ಅಕ್ಷಯ್ ಕುಮಾರ್ ಅಜಮನಿ, ರಾಜ್ಯದಾದ್ಯಂತ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಹೋರಾಟವನ್ನು ಸಂಘಟಿಸಲು ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಅಲ್ಲದೆ, ಕೆಲವು ಶೈಕ್ಷಣಿಕ ಸಂಸ್ಥೆಗಳಲ್ಲಿ ನಿಯಮಬಾಹಿರವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇಂದಿನ ಅಗತ್ಯಗಳಿಗೆ ಅನುಗುಣವಾಗಿ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನು ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಅನೇಕ ತರಬೇತಿ ಸಂಸ್ಥೆಗಳಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಬೋರ್ಡ್, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಮೂಲಭೂತ ಶೈಕ್ಷಣಿಕ ಸೌಲಭ್ಯಗಳ ಕೊರತೆ ಇದ್ದರೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಗಮನ ಹರಿಸುತ್ತಿಲ್ಲ ಎಂದು ಅವರು ತಿಳಿಸಿದರು.
ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳೊಂದಿಗೆ, ವಿಶೇಷವಾಗಿ ಮಹಿಳಾ ವಿದ್ಯಾರ್ಥಿನಿಯರೊಂದಿಗೆ ಅವಹೇಳನಕಾರಿ ಹಾಗೂ ಅಸಭ್ಯ ರೀತಿಯಲ್ಲಿ ವರ್ತಿಸಲಾಗುತ್ತಿರುವುದು ಖಂಡನೀಯವಾಗಿದೆ. ಪರೀಕ್ಷೆಗಳು ಸಕಾಲಕ್ಕೆ ನಡೆಯದೇ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದು, ವ್ಯವಸ್ಥಿತ ಮಾರ್ಗದರ್ಶನದ ಕೊರತೆಯಿಂದ ವಿದ್ಯಾರ್ಥಿಗಳು ಸೂಕ್ತ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.
ಇದರ ಜೊತೆಗೆ ಆಂತರಿಕ ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಮೌಲ್ಯಮಾಪನದಲ್ಲಿ ಪಕ್ಷಪಾತ ನಡೆಯುತ್ತಿದ್ದು, ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಈ ಎಲ್ಲಾ ಗಂಭೀರ ಸಮಸ್ಯೆಗಳ ವಿರುದ್ಧ ಹಾಗೂ ಶಾಶ್ವತ ಪರಿಹಾರಕ್ಕಾಗಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಮುಂಬರುವ ದಿನಗಳಲ್ಲಿ ವಿಜಯಪುರದಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು. ಇದರ ಅಂಗವಾಗಿ ಹೋರಾಟದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಹುಲ್ ಕಳಸದ, ಮಂಜುನಾಥ್ ಕವಳಿ, ಆದರ್ಶ್, ಸಂದೇಶ್ ಕುಮಟಗಿ, ಭೀಮು ಛಲವಾದಿ, ಸಿದ್ದು, ಸಂದೀಪ್, ಮಹೇಶ್, ಚಿದಾನಂದ, ಸಚಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಬೃಹತ್ ಹೋರಾಟದ ಪೋಸ್ಟರ್ ಬಿಡುಗಡೆ


