ಸೆ. 22ರಂದು ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’; ಮತದಾರರ ಸಮಸ್ಯೆಗಳ ಕುರಿತು ಚರ್ಚೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಎದುರಾಗಿರುವ ಲೋಪದೋಷಗಳು, ಮತದಾರರ ಹಕ್ಕುಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಭಾಗವಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಸೆ. 22ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ.
ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಸಾರ್ವಜನಿಕರ ಅನುಭವ ಹಾಗೂ ಅಹವಾಲುಗಳನ್ನು ದಾಖಲಿಸುವ ಉದ್ದೇಶದಿಂದ ಸೆ. 22ರಿಂದ 30ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಈ ಅಭಿಯಾನ ನಡೆಯಲಿದೆ.
ಮಧುವನ್ ಹೋಟೆಲ್ನಲ್ಲಿ ಸಭೆ
ವಿಜಯಪುರದ ಸ್ಟೇಷನ್ ರಸ್ತೆಯಲ್ಲಿರುವ ಮಧುವನ್ ಹೋಟೆಲ್ನ ಕಾನ್ಫರೆನ್ಸ್ ಹಾಲ್ನಲ್ಲಿ ಸೆ. 22ರಂದು ಸಂಜೆ 5ರಿಂದ 7ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಕಾಶ್ ರಾಜ್ ಸೇರಿದಂತೆ ನಾಗರಿಕ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, SIR ಪ್ರಕ್ರಿಯೆಯಲ್ಲಿ ಮತದಾರರು ಎದುರಿಸುತ್ತಿರುವ ಸಮಸ್ಯೆಗಳು, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಹಾಗೂ ದಾಖಲೆಗಳ ಪರಿಶೀಲನೆ ಕುರಿತು ಚರ್ಚೆ ನಡೆಸಲಿದ್ದಾರೆ.
100 ಮತಗಟ್ಟೆಗಳಲ್ಲಿ ಪರಿಶೋಧನೆ
ರಾಜ್ಯದ ಆಯ್ದ 100 ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯ ಪರಿಶೋಧನೆ ನಡೆಸಿ, ಸಮಸ್ಯೆಗಳನ್ನು ಎದುರಿಸುತ್ತಿರುವ ಮತದಾರರಿಂದ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮತದಾರರ ಸಮಸ್ಯೆಗಳು ಹಾಗೂ ಹಕ್ಕುಗಳಿಗೆ ಸಂಬಂಧಿಸಿದಂತೆ ನಾಗರಿಕ ವರದಿಯನ್ನು ಸಿದ್ಧಪಡಿಸಲಾಗುವುದು ಎಂದು ಮತ ಕಾವಲು ಸಮಿತಿ ವಿಜಯಪುರ ತಿಳಿಸಿದೆ.
ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳ ಕುರಿತು ನಡೆಯುವ ಈ ಕಾರ್ಯಕ್ರಮದಲ್ಲಿ ನಾಗರಿಕರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಬೇಕೆಂದು ಮತ ಕಾವಲು ಸಮಿತಿಯ ಅಧ್ಯಕ್ಷ ಭೋಗೇಶ ಸೋಲಾಪುರ ಮನವಿ ಮಾಡಿದ್ದಾರೆ.


