ಪೌರಕಾರ್ಮಿಕರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಮೇಯರ್ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:
ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬಾಗಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್‌ ಸೇರಿದಂತೆ ಸಂಕಷ್ಟದ ಸಂದರ್ಭದಲ್ಲಿಯೂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿದ್ದು, ಅವರ ಸೇವೆಯನ್ನು ಗೌರವಿಸಬೇಕು. ಕರ್ತವ್ಯ ನಿರ್ವಹಿಸುವಾಗ ಸಮವಸ್ತ್ರ, ಮಾಸ್ಕ್ ಹಾಗೂ ಸುರಕ್ಷತಾ ಪರಿಕರಗಳನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಪೌರಕಾರ್ಮಿಕರ ಪರಿಶ್ರಮದಿಂದ ನಗರ ಸ್ವಚ್ಛ ಹಾಗೂ ಸುಂದರವಾಗಿರಲು ಸಾಧ್ಯವಾಗಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವಾಗ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ನೀಡುವಂತೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು. ನಗರದಲ್ಲಿ ಶೇ.80ರಷ್ಟು ಕಸ ವಿಂಗಡಿಸಿ ನೀಡಲಾಗುತ್ತಿದ್ದು, ಉಳಿದವರಲ್ಲಿಯೂ ಈ ಪದ್ಧತಿ ರೂಢಿಸಬೇಕು ಎಂದರು.
ಪೌರಕಾರ್ಮಿಕರು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ಕಾರ್ಡ್‌ಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ಆದ್ಯತೆಯಿಂದ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮಾತನಾಡಿ, ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ. 116 ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡಲಾಗಿದ್ದು, 60 ಮಂದಿಗೆ ಟ್ಯಾಬ್ ವಿತರಿಸಲಾಗಿದೆ. ಸುವಿಧಾ ಕೇಂದ್ರದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದ್ದು, ಶೀಘ್ರದಲ್ಲೇ ಉದ್ಘಾಟಿಸಲಾಗುವುದು ಎಂದರು.
ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು, ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಉನ್ನತ ಶಿಕ್ಷಣಕ್ಕಾಗಿ ಸರ್ಕಾರದ ವಿವಿಧ ಯೋಜನೆಗಳಿದ್ದು, ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ‘ಕರುಳ ಬಳ್ಳಿಯ ಕಂಬನಿಯ ಕಥೆಗಳು’ ಪುಸ್ತಕ ಬಿಡುಗಡೆ ಮಾಡಲಾಯಿತು. ಉತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಸನ್ಮಾನಿಸಿ, ಕ್ರೀಡಾಕೂಟ ವಿಜೇತರಿಗೆ ಬಹುಮಾನ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಲಾಯಿತು.
ಉಪ ಮೇಯರ್ ಸುಮಿತ್ರಾ ಜಾಧವ, ಉಪ ಆಯುಕ್ತ ಮಹಾವೀರ ಬೋರಣ್ಣವರ, ಪಾಲಿಕೆ ಸದಸ್ಯರು, ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share this