ಸಪ್ತಸಾಗರ ವಾರ್ತೆ,ವಿಜಯಪುರ, ಜು.20:
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳು (HDI) ಪ್ರಮುಖ ಮಾನದಂಡಗಳಾಗಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳ ಕುರಿತು ಸಂಗ್ರಹಿಸಲಾಗುವ ದತ್ತಾಂಶ ನಿಖರ ಹಾಗೂ ವಿಶ್ವಾಸಾರ್ಹವಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ–2031 ವರದಿಗಳ ತಯಾರಿಕೆಗೆ ಸಂಬಂಧಿಸಿದ ದತ್ತಾಂಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿಯೊಂದು ತಾಲೂಕಿನ ಅಭಿವೃದ್ಧಿ ಸ್ಥಿತಿ ವಿಭಿನ್ನವಾಗಿದ್ದು, ಕೆಲವು ತಾಲೂಕುಗಳು ಶಿಕ್ಷಣ, ಆರೋಗ್ಯ, ಪೌಷ್ಟಿಕತೆ ಹಾಗೂ ಮೂಲಸೌಲಭ್ಯಗಳ ಕ್ಷೇತ್ರದಲ್ಲಿ ಹಿಂದುಳಿದಿರಬಹುದು. ಅಂತಹ ಪ್ರದೇಶಗಳ ಕುರಿತು ಸಮಗ್ರ ಹಾಗೂ ನಿಖರ ಮಾಹಿತಿಯನ್ನು ಸಂಗ್ರಹಿಸಿದರೆ, ಅದರ ಆಧಾರದ ಮೇಲೆ ವೈಜ್ಞಾನಿಕ ವಿಶ್ಲೇಷಣೆ ನಡೆಸಿ ವಿಶೇಷ ಅಭಿವೃದ್ಧಿ ಕಾರ್ಯಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪೌಷ್ಟಿಕ ಆಹಾರ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಅಭಿವೃದ್ಧಿ ಸೂಚ್ಯಂಕಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸಂಬಂಧಿತ ಇಲಾಖೆಗಳು ಸಮನ್ವಯದೊಂದಿಗೆ ಸಂಗ್ರಹಿಸಿ ದಾಖಲಿಸಬೇಕು. ಸಮಗ್ರ ದತ್ತಾಂಶದ ಆಧಾರದ ಮೇಲೆ ರೂಪಿಸಲಾದ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಲು ಪರಿಣಾಮಕಾರಿಯಾಗಲಿವೆ ಎಂದು ಅವರು ಹೇಳಿದರು.
ಯೋಜನಾ ಇಲಾಖೆಯ ಹಿರಿಯ ನಿರ್ದೇಶಕ ಬಸವರಾಜ ಎಸ್., ಮಾತನಾಡಿ,ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಸೇರಿಸುವ ಕಾರ್ಯವನ್ನು ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು. ಮಾನವ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರೊ. ಡಿ.ಎಂ. ಮದರಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನಿಖರ ದತ್ತಾಂಶ ಸಲ್ಲಿಕೆಗೆ ಸಿಇಒ ರಿಷಿ ಆನಂದ ಸೂಚನೆ


