ಗ್ರಾಮೀಣ ಉದ್ಯೋಗ, ಜೀವನೋಪಾಯ ಅಭಿವೃದ್ಧಿ ಹಾಗೂ ಶಾಶ್ವತ ಆಸ್ತಿ ನಿರ್ಮಾಣಕ್ಕೆ ಆದ್ಯತೆ : ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:

ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯೋಜನೆಯ ಉದ್ದೇಶ, ಮಾರ್ಗಸೂಚಿಗಳು ಹಾಗೂ ಅನುಷ್ಠಾನ ಪ್ರಕ್ರಿಯೆಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ವಿಬಿ-ಜಿ ರಾಮ್ ಜಿ (Viksit Bharat – Guarantee for Rozgar and Ajeevika Mission – Gramin) ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಪಂ‌ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ
ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಜನರಿಗೆ ಅಗತ್ಯವಿರುವ ಉದ್ಯೋಗವನ್ನು ಒದಗಿಸುವುದರೊಂದಿಗೆ ನೀರಿನ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿ, ಗ್ರಾಮೀಣ ಮೂಲಸೌಕರ್ಯ ಬಲಪಡಿಸುವಿಕೆ, ಜೀವನೋಪಾಯಕ್ಕೆ ಪೂರಕವಾದ ಆಸ್ತಿಗಳ ನಿರ್ಮಾಣ ಹಾಗೂ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳ ಅಗತ್ಯತೆಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಬೇಕು. ಗ್ರಾಮ ಸಭೆಗಳ ಮೂಲಕ ಜನರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಂಡು ಯೋಜನೆ ರೂಪಿಸಬೇಕು. ಕಾಮಗಾರಿಗಳ ಗುಣಮಟ್ಟ, ಪಾರದರ್ಶಕತೆ ಹಾಗೂ ಸಮಯಬದ್ಧ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈವರೆಗೆ ಹಲವಾರು ಉತ್ತಮ ಗುಣಮಟ್ಟದ ಹಾಗೂ ಸಾರ್ವಜನಿಕರಿಗೆ ಉಪಯುಕ್ತವಾದ ಶಾಶ್ವತ ಆಸ್ತಿಗಳ ನಿರ್ಮಾಣ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಅದೇ ರೀತಿಯಲ್ಲಿ ಹೊಸದಾಗಿ ಜಾರಿಗೆ ಬರುತ್ತಿರುವ ವಿಬಿ-ಜಿ ರಾಮ್ ಜಿ ಯೋಜನೆಯಡಿಯೂ ಸಹ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳಿದ್ದು, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದೆ.
ಯೋಜನೆಯ ಉದ್ದೇಶಗಳನ್ನು ಅರ್ಥಮಾಡಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸನ್ನದ್ಧರಾಗಬೇಕು. ಈ ತರಬೇತಿಯ ಸದುಪಯೋಗ ಪಡೆದುಕೊಂಡು ಯೋಜನೆಯ ಪ್ರತಿಯೊಂದು ಪ್ರಕ್ರಿಯೆ, ಮಾರ್ಗಸೂಚಿ ಹಾಗೂ ಅನುಷ್ಠಾನ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಗೆ ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಗದಿತ ಗುರಿಗೆ ಅನುಗುಣವಾಗಿ ಹೆಚ್ಚಿನ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಉದ್ಯೋಗಾವಕಾಶಗಳನ್ನು ಒದಗಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕರ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು ಪ್ರಮುಖ ಆದ್ಯತೆಯಾಗಬೇಕು. ಮಹಿಳಾ ಭಾಗವಹಿಸುವಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಹೆಚ್ಚಿನ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಬೇಕು.
ಪ್ರಾರಂಭಿಸಿದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಸರ್ಕಾರದಿಂದ ಬಿಡುಗಡೆ ಮಾಡಿದ ಸಾಮಗ್ರಿ ಅನುದಾನವನ್ನು ಆದ್ಯತೆಯ ಮೇರೆಗೆ ಪಾವತಿ ಮಾಡಿ ಪೂರ್ಣಗೊಳಿಸಬೇಕು. ಯೋಜನೆಯ ಅನುಷ್ಠಾನದಲ್ಲಿ ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಎನ್.ಎಂ.ಎಂ.ಎಸ್ ಮೂಲಕ ಹಾಜರಾತಿ ದಾಖಲಿಸುವುದು ಹಾಗೂ ಫೇಸ್ ಅಥೆಂಟಿಕೇಶನ್ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಎಲ್ಲಾ ನಿಯಮಗಳು, ಮಾರ್ಗಸೂಚಿಗಳು ಮತ್ತು ಪ್ರಕ್ರಿಯೆಗಳನ್ನು ಯಾವುದೇ ಲೋಪವಿಲ್ಲದೆ ಅನುಸರಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಮಟ್ಟದಲ್ಲಿ ಯೋಜನೆಯ ಯಶಸ್ಸು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆ ಹಾಗೂ ಬದ್ಧತೆಯ ಮೇಲೆ ಅವಲಂಬಿತವಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಬಳಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ವಿಬಿ-ಜಿ ರಾಮ್ ಜಿ ಯೋಜನೆಯ ಪರಿಚಯ ಹಾಗೂ ಅನುಷ್ಠಾನ ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದ ಅವರು, ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವುದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವುದು ಹಾಗೂ ದೀರ್ಘಕಾಲಿಕ ಉಪಯೋಗ ನೀಡುವ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಯೋಜನೆಯ ಪ್ರಮುಖ ಆಶಯವಾಗಿದೆ. ಜಲ ಸಂರಕ್ಷಣೆ ಮತ್ತು ನೀರಿನ ಭದ್ರತೆ, ಕೃಷಿಗೆ ಪೂರಕವಾದ ಕಾಮಗಾರಿಗಳು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಜೀವನೋಪಾಯ ಅಭಿವೃದ್ಧಿಗೆ ಸಹಕಾರಿಯಾಗುವ ಕಾಮಗಾರಿಗಳಿಗೆ ಆದ್ಯತೆ ನೀಡುವ ಕುರಿತು ತಿಳಿಸಿದರು. ಈ ಯೋಜನೆಯಡಿ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬಹುದಾಗಿದೆ ಎಂದು ತಿಳಿಸಿದರು. ಪ್ರಮುಖವಾಗಿ
ಜಲ ಭದ್ರತೆಗಾಗಿ ಜಲ ಸಂಬಂಧಿತ ಕಾಮಗಾರಿಗಳು, ಮಳೆ ನೀರು ಸಂರಕ್ಷಣೆ, ಜಲ ಸಂಗ್ರಹಣೆ, ಅಂತರ್ಜಲ ಮಟ್ಟ ಹೆಚ್ಚಿಸುವಿಕೆ, ಕೆರೆ-ಕಟ್ಟೆಗಳ ಅಭಿವೃದ್ಧಿ, ನೀರು ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ.


ಮೂಲ ಗ್ರಾಮೀಣ ಸೌಕರ್ಯಗಳು:
ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಕಾಮಗಾರಿಗಳಾದ ಗ್ರಾಮೀಣ ಸಂಪರ್ಕ ರಸ್ತೆ, ಸಾರ್ವಜನಿಕ ಉಪಯೋಗದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮಗಳ ಅಗತ್ಯತೆಗೆ ಅನುಗುಣವಾದ ಇತರೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ಜೀವನೋಪಾಯ ಸಂಬಂಧಿತ ಮೂಲಸೌಕರ್ಯಗಳು:

ಗ್ರಾಮೀಣ ಕುಟುಂಬಗಳ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗುವ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಇತರೆ ಜೀವನೋಪಾಯ ಚಟುವಟಿಕೆಗಳಿಗೆ ಪೂರಕವಾದ ಆಸ್ತಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ.

ತೀವ್ರ ಹವಾಮಾನ ಘಟನೆಗಳು ಮತ್ತು ವಿಪತ್ತು ಸನ್ನದ್ಧತೆಗಾಗಿ ವಿಶೇಷ ಕಾಮಗಾರಿಗಳು:

ಪ್ರಕೃತಿ ವಿಕೋಪಗಳು, ಹವಾಮಾನ ಬದಲಾವಣೆ ಹಾಗೂ ತೀವ್ರ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಲು ಸಹಕಾರಿಯಾಗುವ ಮುನ್ನೆಚ್ಚರಿಕಾ ಮತ್ತು ತಡೆಗಟ್ಟುವ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಕೇವಲ ಉದ್ಯೋಗ ಒದಗಿಸುವ ಯೋಜನೆಯಾಗಿ ಮಾತ್ರವಲ್ಲದೆ, ಗ್ರಾಮೀಣ ಆರ್ಥಿಕತೆ ಬಲಪಡಿಸುವುದು, ಶಾಶ್ವತ ಆಸ್ತಿಗಳ ನಿರ್ಮಾಣ ಹಾಗೂ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿರುವ ಸಮಗ್ರ ಅಭಿವೃದ್ಧಿ ಯೋಜನೆಯಾಗಿದೆ. ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ವಲಸೆ ಹೋಗುವ ಪರಿಸ್ಥಿತಿಯನ್ನು ಕಡಿಮೆ ಮಾಡಲು ಸಹಕಾರಿಯಾಗುತ್ತದೆ. ನಿರಂತರ ಉದ್ಯೋಗ ದೊರೆಯುವುದರಿಂದ ಕುಟುಂಬಗಳ ಆದಾಯ ಹೆಚ್ಚಳವಾಗಿ, ಜೀವನ ನಿರ್ವಹಣೆಗೆ ಆರ್ಥಿಕ ಭದ್ರತೆ ಒದಗುತ್ತದೆ. ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಜನರಿಗೆ ಉದ್ಯೋಗ ಭದ್ರತೆ, ಆದಾಯ ಹೆಚ್ಚಳ, ಕೃಷಿ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ಶಾಶ್ವತ ಜೀವನೋಪಾಯದ ಅವಕಾಶಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.
ವಿಬಿ-ಜಿ ರಾಮ್ ಜಿ ಯೋಜನೆಯ ಉದ್ದೇಶವು ಕೇವಲ ಉದ್ಯೋಗ ಒದಗಿಸುವುದಕ್ಕೆ ಸೀಮಿತವಾಗದೇ, ಗ್ರಾಮೀಣ ಪ್ರದೇಶಗಳಲ್ಲಿ ಶಾಶ್ವತ ಅಭಿವೃದ್ಧಿಗೆ ಪೂರಕವಾದ ಆಸ್ತಿಗಳ ನಿರ್ಮಾಣ ಹಾಗೂ ಗ್ರಾಮೀಣ ಜೀವನಮಟ್ಟ ಸುಧಾರಿಸುವುದಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಗತ್ಯತೆ ಆಧಾರಿತ ಯೋಜನೆ ರೂಪಿಸಿ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ. ಕುಂಬಾರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಅನುಷ್ಠಾನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ತಾಂತ್ರಿಕ ಸಿಬ್ಬಂದಿಗಳು, ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.

Share this