ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ.24:
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ,ಸರ್ಕಾರದ ಯೋಜನೆ ಅನುಷ್ಠಾನಗೊಳಿಸಿ ಅವರಿಗೆ ಸರ್ಕಾರ ನೀಡುವ ಸೌಲಭ್ಯ ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ
ಸಭಾಂಗಣದಲ್ಲಿ ಮಂಗಳವಾರ ‌ನಡೆದ
ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮುದಾಯ‌ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ, ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಬೊರ್ ವೆಲ್ ಕೊರೆಯಿಸುವ ಬಗ್ಗೆ ಸದಸ್ಯರು ವಿಷಯ ಪ್ರಸ್ತಾಪಿಸಿದರು ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಭೂತ ಸೌಲಭ್ಯ ಒದಗಿಸಿ, ಈ ಸಮುದಾಯದ ಕಾಲೋನಿಗಳ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರ ಸೌಲಭ್ಯ ಒದಗಿಸಿದ್ದು, ಸಮರ್ಪವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಜನಾಂಗದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಅವರಿಗೆ ದೊರಕಿಸಬೇಕಾದ ಸೌಲಭ್ಯಗಳನ್ನು ತಲುಪಿಸಿ,ಜನಾಂಗದ ಆರ್ಥಿಕ ಅಭಿವೃದ್ಧಿಗಾಗಿ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಜನಾಂಗದವರ ಆರ್ಥಿಕ ಸ್ವಾವಲಂಬನೆ ಹೊಂದಲು ಈ ಸಮುದಾಯಗಳಿಗೆ ಸರ್ಕಾರ ನೀಡುವ ಆರ್ಥಿಕ ಬೆಂಬಲದ ಯೋಜನೆಗಳ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಜಾಗೃತಿ ಮೂಡಿಸಿ ನಿಗಮದಿಂದ ಅನುಷ್ಟಾನಗೊಳ್ಳುವ ಸರ್ಕಾರದ ವಿವಿಧ ಸೌಲಭ್ಯ- ಸವಲತ್ತುಗಳನ್ನು ಅರ್ಹರು ಪಡೆದುಕೊಳ್ಳಲು ತಿಳಿವಳಿಕೆ ನೀಡುವಂತೆ ಸೂಚಿಸಿದರು.
2022 ರಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಗಳ ಮಾಹಿತಿ ವಿವರ ಸಭೆಗೆ ಮಂಡಿಸಲಾಯಿತು.
ಈಗಾಗಲೇ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ, ಸ್ವಾವಲಂಬಿ ಸಾರಥಿ ಯೋಜನೆ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ವಿಳಂಬವಾಗದಂತೆ ಕ್ರಮ ವಹಿಸಿ ಯೋಜನೆ ಲಾಭ ಪಡೆದುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಮುದಾಯದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ‌ ಕಾರ್ಡ್ ವಿತರಿಸಿ ಅವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಮಕ್ಕಳ ಶಿಕ್ಷಣಕ್ಕಾಗಿ ಗ್ರಂಥಾಲಯ ಸ್ಥಾಪನೆ, ನಗರದ ವಾರ್ಡ್ ನಂ.6ರಲ್ಲಿ ಸಮುದಾಯ ಭವನದ ಮುಂಭಾಗದಲ್ಲಿರುವ ಚರಂಡಿ ಸಮರ್ಪಕ ಕಾಮಗಾರಿ, ಅತಿ ಹೆಚ್ಚು ಜನ ವಾಸಿಸುವ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆ, ಬೀದಿ ದೀಪ, ಈ ಸಮುದಾಯ ವಾಸಿಸುವ ಕಾಲೊನಿಯಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಅಭಿವೃದ್ಧಿ ಪಡಿಸುವಂತೆ ಸಮಿತಿ ಸದಸ್ಯರು ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತಕುಮಾರ ಗುಣಾರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾರ ಮಹೇಶ ಪೋತದಾರ, ಹೆಸ್ಕಾಂ‌ ಅಧಿಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯದ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಸುನೀಲ ನಾರಾಯಣ ಭಜಂತ್ರಿ, ಸಂಜೀವಕುಮಾರ ದಶವಂತ, ಧರ್ಮಣ್ಣ ವಿಭೂತಿ, ರಾಹುಲ ಶಿಳ್ಳಿಕ್ಯಾತರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Share this