ಜಿ.ಪಂ., ತಾ.ಪಂ. ಚುನಾವಣೆಗಳಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:
ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯತ ಅಥವಾ ತಾಲೂಕು ಪಂಚಾಯತ ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿಯೂ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಮತ್ತು ನೆಲೆವಿಸ್ತಾರವಿದೆ. ನಗರಸಭೆ, ಪುರಸಭೆ ಚುನಾವಣೆಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಕಾಂಗ್ರೆಸ್ ಪಕ್ಷವು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಅದೇ ಆದ್ಯತೆ ನೀಡಬೇಕು ಎಂದರು.
ಕಳೆದ 40 ವರ್ಷಗಳ ಇತಿಹಾಸದಲ್ಲಿ ಕೇವಲ ನಾಲ್ವರು ಅಲ್ಪಸಂಖ್ಯಾತರು ಮಾತ್ರ ಜಿಲ್ಲಾ ಪಂಚಾಯತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅವರಲ್ಲಿ ಮೂವರು ಜನತಾ ದಳದಿಂದ ಹಾಗೂ ಒಬ್ಬರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಅಗತ್ಯವಿದೆ ಎಂದು ಹೇಳಿದರು.
ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿದರೆ ಇತರ ಸಮುದಾಯಗಳ ಮತಗಳು ದೊರೆಯುವುದಿಲ್ಲ ಎಂಬ ಭಾವನೆ ಕೆಲವು ಕಾಂಗ್ರೆಸ್ ನಾಯಕರಲ್ಲಿದೆ. ಆದರೆ, ಇತರ ಸಮುದಾಯದ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಬಲ ಪಡೆಯುವ ಜವಾಬ್ದಾರಿ ಪಕ್ಷದ ನಾಯಕರ ಮೇಲಿದೆ. ರಾಜಕೀಯ ಪರಿಸ್ಥಿತಿ ಬದಲಾಗುತ್ತಿದ್ದು, ಅಧಿಕಾರ ಮತ್ತು ಅವಕಾಶಗಳು ದೊರೆಯದಿದ್ದರೆ ಯುವಜನರು ಪರ್ಯಾಯ ಪಕ್ಷಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
ಮುಸ್ಲಿಂ ಸಮುದಾಯವು ಅವಕಾಶವಾದಿ ರಾಜಕಾರಣಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿಲ್ಲ. ಸಂವಿಧಾನ ಮತ್ತು ದೇಶದ ಏಕತೆಯ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದೆ ಎಂದರು.
ಗೆಲುವಿನ ಸಾಧ್ಯತೆಯಿರುವ ಕ್ಷೇತ್ರಗಳನ್ನು ಗುರುತಿಸಿ, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಕುರಿತು ಪರಿಶೀಲಿಸಲು ಕೆಪಿಸಿಸಿ ನೇತೃತ್ವದಲ್ಲಿ ಸಮಿತಿ ರಚಿಸಬೇಕು. ಈ ಕುರಿತು ಶೀಘ್ರದಲ್ಲೇ ಅಲ್ಪಸಂಖ್ಯಾತ ಸಮುದಾಯದ ಸಭೆ ನಡೆಸಿ, ಅಭ್ಯರ್ಥಿಗಳನ್ನು ಕಣಕ್ಕಿಳಿಸಬಹುದಾದ ಕ್ಷೇತ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ವಿಜಯಪುರ ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಎಂ.ಸಿ. ಮುಲ್ಲಾ ಮಾತನಾಡಿ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಳಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ದಸರಾ ಹಬ್ಬದ ಬಳಿಕ ಪಕ್ಷದ ನಾಯಕರಿಗೆ ಈ ಕುರಿತು ಮನವರಿಕೆ ಮಾಡಿಕೊಡಲಾಗುವುದು ಎಂದರು.
ಸರ್ಕಾರದ ವಿವಿಧ ಯೋಜನೆಗಳು ಜಿಲ್ಲಾ ಪಂಚಾಯತಗಳ ಮೂಲಕ ಅನುಷ್ಠಾನಗೊಳ್ಳುವುದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಅಲ್ಪಸಂಖ್ಯಾತರ ಪ್ರಾತಿನಿಧ್ಯ ಅತ್ಯಗತ್ಯವಾಗಿದೆ. ಕನಿಷ್ಠ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಕ್ಷೇತ್ರಕ್ಕಾದರೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

Share this