ಎರಡನೇ ದಿನವೂ ಬರಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ. ಪಾಟೀಲ ಭೇಟಿ; ತೊಗರಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಪರಿಶೀಲನೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ.10 :
ಜಿಲ್ಲೆಯಲ್ಲಿ ತೀವ್ರ ಬರಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು, ರೈತರಿಗೆ ಸರ್ಕಾರದಿಂದ ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಬೆಳೆ ಹಾನಿಯ ವೈಜ್ಞಾನಿಕ ವರದಿಯನ್ನು ತ್ವರಿತವಾಗಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಬರಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲನೆಗಾಗಿ ಕೈಗೊಂಡಿರುವ ವೀಕ್ಷಣಾ ಪ್ರವಾಸವನ್ನು ಸಚಿವರು ಸೋಮವಾರ ಎರಡನೇ ದಿನವೂ ಮುಂದುವರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಭೇಟಿ ನೀಡಿ, ರೈತರ ಜಮೀನುಗಳಿಗೆ ತೆರಳಿ ಬೆಳೆಗಳ ಸ್ಥಿತಿಗತಿಗಳನ್ನು ಖುದ್ದಾಗಿ ಪರಿಶೀಲಿಸಿದರು.
ಸಾರವಾಡ ಗ್ರಾಮದಲ್ಲಿ ತೊಗರಿ, ಮೆಕ್ಕೆಜೋಳ ಹಾಗೂ ಈರುಳ್ಳಿ ಬೆಳೆಗಳನ್ನು ವೀಕ್ಷಿಸಿದ ಸಚಿವರು, ಮಳೆ ಕೊರತೆಯಿಂದ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿರುವುದನ್ನು ಗಮನಿಸಿದರು.
ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬೆಳೆಯದೆ ಸಂಕಷ್ಟಕ್ಕೆ ಸಿಲುಕಿರುವ ರೈತರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.
ರೈತರ ಸಂಕಷ್ಟವನ್ನು ಕಂಡು ಕಳವಳ ವ್ಯಕ್ತಪಡಿಸಿದ ಸಚಿವ ಡಾ. ಎಂ.ಬಿ. ಪಾಟೀಲ ಅವರು, “ಅನ್ನದಾತರಿಗೆ ಗರಿಷ್ಠ ಮಟ್ಟದ ಪರಿಹಾರ ದೊರಕಬೇಕು. ಇದಕ್ಕಾಗಿ ಬೆಳೆ ಹಾನಿಯ ನಿಖರ ಹಾಗೂ ವೈಜ್ಞಾನಿಕ ಅಂದಾಜು ಅತ್ಯಂತ ಮುಖ್ಯ” ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪ್ರತಿ ಗ್ರಾಮದ ಹಾಗೂ ಪ್ರತಿ ಬೆಳೆಯ ಹಾನಿಯ ವಾಸ್ತವಿಕ ಸ್ಥಿತಿಯನ್ನು ವೈಜ್ಞಾನಿಕವಾಗಿ ದಾಖಲಿಸಿ, ಅಗತ್ಯ ವರದಿಯನ್ನು ಯಾವುದೇ ವಿಳಂಬವಿಲ್ಲದೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಂಬಂಧಪಟ್ಟ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.
ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿಯನ್ನು ಪರಿಶೀಲಿಸುವ ಮೂಲಕ ಸರ್ಕಾರಕ್ಕೆ ನಿಖರ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂಬ ಸಂದೇಶ ನೀಡಿದರು.
ಸಚಿವರ ಪರಿಶೀಲನಾ ಪ್ರವಾಸದ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಕೃಷಿ ಹಾಗೂ ಕಂದಾಯ ಇಲಾಖೆಯ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


