ಸಪ್ತಸಾಗರ ವಾರ್ತೆ,ವಿಜಯಪುರ, ಏ. 7: ಬೇಸಿಗೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು, ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈವರೆಗೂ ಟ್ಯಾಂಕರ್ ಸರಬರಾಜು ಅವಶ್ಯಕತೆ ಕಂಡುಬಂದಿಲ್ಲ.ಆದಾಗ್ಯೂ ಸಮಸ್ಯೆ ಇರುವ ಭಾಗದಲ್ಲಿ ಕುಡಿಯುವ ನೀರಿಗೆ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಪ್ರತಿ ಗ್ರಾಪಂಗಳು ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಭವಿಷ್ಯದ ದಿನಗಳಲ್ಲಿ ಎಲ್ಲಿ ಸಮಸ್ಯೆ ಉಲ್ಬಣಿಸಬಹುದೋ ಅಲ್ಲಿ ಪರ್ಯಾಯವಾಗಿ ಜಲಮೂಲಗಳನ್ನು
ಗುರುತಿಸಿಟ್ಟುಕೊಳ್ಳಬೇಕು ಎಂದ ಜಿಲ್ಲಾಧಿಕಾರಿಗಳು
ಬೋರವೆಲ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದರು.
ಈ ಹಿಂದೆ ಕುಡಿಯುವ ನೀರಿಗೆ ಎಲ್ಲೆಲ್ಲಿ ಸಮಸ್ಯೆಯಾಗಿತ್ತು ಎಂಬ ಮಾಹಿತಿ ಇದೆ. ಅಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ತಾಲೂಕು ಮಟ್ಟದಲ್ಲಿ ಕಾಲ-ಕಾಲಕ್ಕೆ ಕಾರ್ಯಪಡೆ ಸಭೆ ನಡೆಸುವ ಮೂಲಕ ಬೇಸಿಗೆಯಲ್ಲಿ
ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಇನ್ನೊಂದೆಡೆ ಲಭ್ಯವಿರುವ ಜಲಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ನೀರು ಪರೀಕ್ಷಿಸಿ, ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಬಹು ಜಾಗೃತಿ ವಹಿಸಬೇಕು ಎಂದರು.
ಒಎಚ್ ಟಿ ನೀರು ಸಂಗ್ರಹ ಟ್ಯಾಂಕ್ ನಿರಂತರವಾಗಿ ಸ್ವಚ್ಛಗೊಳಿಸಬೇಕು. ದಾಖಲೆ ನಮೂದಿಸಿ,ನಿರ್ವಹಿಸಬೇಕು ಗ್ರಾಪಂ ಮಟ್ಟದಲ್ಲಿ ಬೋರವೆಲ್ ದುರಸ್ತಿ ತಮ್ಮ ಹಂತದಲ್ಲಿ ಮಾಡಿಕೊಳ್ಳಬೇಕು. ಈಗಾಗಲೇ ಸಾಕಷ್ಟು ಸೂಚನೆಗಳನ್ನು ನೀಡಲಾಗಿದೆ. ಬೋರವೆಲ್ ದುರಸ್ತಿ ಮಾಡಿಸದೇ ನಿರ್ಲಕ್ಷ್ಯ ವಹಿಸಬಾರದು. ಮುಂಚಿತವಾಗಿ ತಿಳಿದುಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತಿ, ಸ್ಥಳೀಯ ಸಂಸ್ಥೆಗಳ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದೂ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಬಿಸಿಲಿನ ತಾಪಮಾನದಿಂದಾಗುವ ಪರಿಣಾಮಗಳ ಬಗ್ಗೆ ಜನರು ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು-ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ


