ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಗಂಭೀರ ಆರೋಪ ಮಾಡುತ್ತಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ನಿಜವಾದ ಪ್ರತಿಭಾವಂತರಿಗೆ ಅನ್ಯಾಯವಾಗಿದ್ದು, ಮಧ್ಯವರ್ತಿಗಳು ಒಂದೊಂದು ಹುದ್ದೆಗೆ ₹80 ಲಕ್ಷದವರೆಗೆ ಹಣ ಬೇಡಿಕೆ ಇಟ್ಟಿರುವ ಸ್ಟಿಂಗ್ ಆಪರೇಷನ್ ವಿಡಿಯೋಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ ಎಂದು ಆರೋಪಿಸಿದರು.
ಕೆಪಿಎಸ್ಸಿಯಲ್ಲಿ ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರಿಗೆ ನಕಲಿ ಆದಾಯ ಪ್ರಮಾಣಪತ್ರದ ಮೂಲಕ ಅಕ್ರಮವಾಗಿ ಉದ್ಯೋಗ ಕಲ್ಪಿಸಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಪ್ರಕರಣ ಇನ್ನೂ ಜನರ ಮನಸ್ಸಿನಿಂದ ಮಾಸಿಲ್ಲ. ಇದರ ಬೆನ್ನಲ್ಲೇ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲೂ ಭ್ರಷ್ಟಾಚಾರದ ಆರೋಪ ಕೇಳಿಬಂದಿರುವುದು ರಾಜ್ಯದ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಹೇಳಿದರು.
“ಉದ್ಯೋಗಕ್ಕಾಗಿ ವರ್ಷಗಳ ಕಾಲ ಶ್ರಮಿಸಿ ಪರೀಕ್ಷೆ ಬರೆದ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ಅಥವಾ ಸಿಬಿಐ ತನಿಖೆಗೆ ವಹಿಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು” ಎಂದು ಒತ್ತಾಯಿಸಿದರು.
ರಾಜ್ಯದ ಯುವಕರಿಗೆ ಅನ್ಯಾಯವಾಗುತ್ತಿದ್ದರೂ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೌನ ವಹಿಸಿರುವುದು ಏಕೆ? ವಿದ್ಯಾರ್ಥಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನಾಯಕರು ಕರ್ನಾಟಕದ ಅಭ್ಯರ್ಥಿಗಳ ಪರವಾಗಿ ಯಾವಾಗ ಧ್ವನಿ ಎತ್ತಲಿದ್ದಾರೆ ಎಂದು ಪ್ರಶ್ನಿಸಿದರು.
ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರಕುವವರೆಗೆ ಸ್ವಾಮಿ ವಿವೇಕಾನಂದ ಸೇನೆ ಹೋರಾಟ ಮುಂದುವರಿಸಲಿದೆ ಎಂದು ರಾಘವ್ ಅಣ್ಣಿಗೇರಿ ಎಚ್ಚರಿಸಿದ್ದಾರೆ.
ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ


